46
ರಚನೆಗಾರರು: ಕೋರಹೀಯರು.
ದೇವರು ನಮಗೆ ಆಶ್ರಯವೂ ಬಲವೂ ಆಗಿದ್ದಾನೆ.
ಆತನು ಆಪತ್ತಿನಲ್ಲಿ ನಮಗೆ ಸಹಾಯಮಾಡಲು ಸದಾ ಸಿದ್ಧನಾಗಿರುವನು.
ಆದ್ದರಿಂದ ಭೂಮಿಯು ನಡುಗಿದರೂ ಬೆಟ್ಟಗಳು
ಸಮುದ್ರದೊಳಗೆ ಮುಳುಗಿಹೋದರೂ ನಮಗೇನೂ ಭಯವಿಲ್ಲ.
ಸಮುದ್ರಗಳು ಭೋರ್ಗರೆಯುತ್ತಾ ನೊರೆಕಾರಿದರೂ
ಅವುಗಳ ಅಲ್ಲೋಲಕಲ್ಲೋಲಗಳಿಂದ ಬೆಟ್ಟಗಳು ನಡುಗಿದರೂ ನಮಗೇನೂ ಭಯವಿಲ್ಲ.
 
ಒಂದು ನದಿ ಅದೆ; ಅದರ ಕಾಲುವೆಗಳು ಮಹೋನ್ನತನಾದ ದೇವರ ಪವಿತ್ರ ಪಟ್ಟಣವಾಗಿರುವ
ದೇವನಗರವನ್ನು ಸಂತೋಷಪಡಿಸುತ್ತದೆ.
ದೇವರು ಆ ಪಟ್ಟಣದಲ್ಲಿದ್ದಾನೆ, ಆದ್ದರಿಂದ ಅದೆಂದಿಗೂ ನಾಶವಾಗುವುದಿಲ್ಲ.
ಸೂರ್ಯೋದಯಕ್ಕಿಂತ ಮೊದಲೇ ದೇವರು ಅದರ ಸಹಾಯಕ್ಕಾಗಿ ಬರುವನು.
ಆತನು ಗರ್ಜಿಸಲು, ಜನಾಂಗಗಳು ಭಯದಿಂದ ನಡುಗುತ್ತವೆ, ರಾಷ್ಟ್ರಗಳು ಬಿದ್ದುಹೋಗುತ್ತವೆ;
ಭೂಮಿಯು ಕರಗಿಹೋಗುವುದು.
ಸೇನಾಧೀಶ್ವರನಾದ ಯೆಹೋವನು ನಮ್ಮೊಂದಿಗಿದ್ದಾನೆ.
ಯಾಕೋಬನ ದೇವರು ನಮ್ಮ ಆಶ್ರಯದುರ್ಗವಾಗಿದ್ದಾನೆ.
ಬನ್ನಿರಿ, ಯೆಹೋವನ ಕಾರ್ಯಗಳನ್ನು ನೋಡಿರಿ;
ಭೂಮಿಯ ಮೇಲೆ ಆತನು ಮಾಡುತ್ತಿರುವ ಭಯಂಕರವಾದ ಕಾರ್ಯಗಳನ್ನು ನೋಡಿರಿ.
ಇಡೀ ಪ್ರಪಂಚದಲ್ಲಿ ಆತನು ಯುದ್ಧವನ್ನು ನಿಲ್ಲಿಸುವನು;
ಬಿಲ್ಲುಗಳನ್ನೂ ಗುರಾಣಿಗಳನ್ನೂ* ಗುರಾಣಿಗಳನ್ನು ಅಥವಾ ರಥಗಳನ್ನು. ಮುರಿದುಹಾಕುವನು; ಗುರಾಣಿಗಳನ್ನು ಬೆಂಕಿಯಿಂದ ಸುಟ್ಟುಹಾಕುವನು.
 
10 ದೇವರು ಹೀಗೆನ್ನುವನು: “ಹೋರಾಡುವುದನ್ನು ನಿಲ್ಲಿಸಿ, ನಾನೇ ದೇವರೆಂಬುದನ್ನು ಕಲಿತುಕೊಳ್ಳಿ!
ನಾನು ಜನಾಂಗಗಳನ್ನು ಸೋಲಿಸುವೆನು!
ಇಡೀ ಲೋಕವನ್ನು ಹತೋಟಿಗೆ ತೆಗೆದುಕೊಳ್ಳುವೆನು!”
 
11 ಸೇನಾಧೀಶ್ವರನಾದ ಯೆಹೋವನು ನಮ್ಮೊಂದಿಗಿದ್ದಾನೆ.
ಯಾಕೋಬನ ದೇವರು ನಮಗೆ ಆಶ್ರಯದುರ್ಗವಾಗಿದ್ದಾನೆ.
 

*46:9: ಗುರಾಣಿಗಳನ್ನು ಅಥವಾ ರಥಗಳನ್ನು.