52
ಎದೋಮ್ಯನಾದ ದೋಯೇಗನು ಸೌಲನ ಬಳಿಗೆ ಹೋಗಿ, “ದಾವೀದನು ಅಹೀಮೆಲೆಕನ ಮನೆಯಲ್ಲಿದ್ದಾನೆ” ಎಂದು ತಿಳಿಸಿದಾಗ ರಚಿಸಲ್ಪಟ್ಟ ಕೀರ್ತನೆಯಿದು. ರಚನೆಗಾರ: ದಾವೀದ.
ದುಷ್ಟಾಧಿಕಾರಿಯೇ, ನಿನ್ನ ದುಷ್ಕೃತ್ಯಗಳ ಕುರಿತು ಜಂಬಪಡುವುದೇಕೇ?
ದೇವರ ದೃಷ್ಟಿಗೆ ನೀನು ಅಸಹ್ಯಕರವಾಗಿರುವೆ.
ಮೋಸಗಾರನೇ, ನಿನ್ನ ನಾಲಗೆಯು ಹರಿತವಾದ ಕ್ಷೌರ ಕತ್ತಿಯಂತಿದ್ದು
ನಾಶನದ ಸಂಚುಗಳನ್ನೇ ಮಾಡುವುದು.
ಒಳ್ಳೆಯದಕ್ಕಿಂತಲೂ ಕೆಟ್ಟದ್ದನ್ನೇ ನೀನು ಹೆಚ್ಚು ಪ್ರೀತಿಸುವೆ.
ನಿನಗೆ ಸತ್ಯಕ್ಕಿಂತಲೂ ಸುಳ್ಳೇ ಇಷ್ಟ.
 
ಮೋಸದ ನಾಲಿಗೆಯೇ, ಹಾನಿಕರವಾದ ಮಾತುಗಳೇ ನಿನಗೆ ಇಷ್ಟ.
ದೇವರು ನಿನ್ನನ್ನು ಶಾಶ್ವತವಾಗಿ ನಾಶಮಾಡುವನು,
ಗಿಡವನ್ನು ಬೇರು ಸಹಿತ ಕಿತ್ತುಹಾಕುವಂತೆ ಆತನು ನಿನ್ನನ್ನು ಹಿಡಿದು ನಿನ್ನ ಮನೆಯೊಳಗಿಂದ* ಮನೆಯೊಳಗಿಂದ ಇದರ ಅರ್ಥ ದೇಹ. ದೇವರು ಈ ವ್ಯಕ್ತಿಯನ್ನು ಕೊಲ್ಲುತ್ತಾನೆ ಎಂದು ತಿಳಿಸುವ ಪದ್ಯರೂಪವಿದು. ಕಿತ್ತು ಬೀಸಾಡುವನು.
 
ಒಳ್ಳೆಯವರು ಇದನ್ನು ಕಂಡು
ದೇವರಲ್ಲಿ ಭಯಭಕ್ತಿಯುಳ್ಳವರಾಗುವರು.
ಅವರು ನಿಮ್ಮನ್ನು ನೋಡಿ ನಗುತ್ತಾ ಹೀಗೆನ್ನುವರು:
“ದೇವರ ಮೇಲೆ ಅವಲಂಬಿಸಿಕೊಳ್ಳದ ಇವನಿಗೆ ಏನಾಯಿತು?
ತನ್ನ ಐಶ್ವರ್ಯವೂ ಸುಳ್ಳುಗಳೂ ತನ್ನನ್ನು ಕಾಪಾಡುತ್ತವೆ ಎಂದು ಭಾವಿಸಿಕೊಂಡವನು ಇವನೇ.”
 
ನಾನಾದರೋ ದೇವರ ಆಲಯದ ಅಂಗಳದಲ್ಲಿ ಹಸಿರಸಿರಾಗಿ ಬೆಳೆಯುವ ಆಲೀವ್ ಮರದಂತಿದ್ದೇನೆ.
ನಾನು ದೇವರ ಶಾಶ್ವತವಾದ ಪ್ರೀತಿಯಲ್ಲೇ ಯಾವಾಗಲೂ ಭರವಸವಿಟ್ಟಿರುವೆ.
ದೇವರೇ, ನಿನ್ನ ಉಪಕಾರಗಳಿಗಾಗಿ ನಾನು ನಿನ್ನನ್ನು ಎಂದೆಂದಿಗೂ ಕೊಂಡಾಡುವೆನು.
ನಿನ್ನ ಹೆಸರಿನಲ್ಲೇ ಭರವಸವಿಟ್ಟಿರುವೆ; ಯಾಕೆಂದರೆ ನಿನ್ನ ಹೆಸರು ಎಷ್ಟೋ ಒಳ್ಳೆಯದು.
ನಿನ್ನ ಪವಿತ್ರ ಜನರ ಸನ್ನಿಧಿಯಲ್ಲಿ ನಿನ್ನನ್ನು ಕೊಂಡಾಡುವೆನು.
 

*52:5: ಮನೆಯೊಳಗಿಂದ ಇದರ ಅರ್ಥ ದೇಹ. ದೇವರು ಈ ವ್ಯಕ್ತಿಯನ್ನು ಕೊಲ್ಲುತ್ತಾನೆ ಎಂದು ತಿಳಿಸುವ ಪದ್ಯರೂಪವಿದು.