61
ರಚನೆಗಾರ: ದಾವೀದ.
ದೇವರೇ, ನನ್ನ ಮೊರೆಯನ್ನು ಕೇಳು.
ನನ್ನ ಪ್ರಾರ್ಥನೆಗೆ ಕಿವಿಗೊಡು.
ನಾನೆಲ್ಲೇ ಇದ್ದರೂ, ಎಷ್ಟೇ ಬಲಹೀನನಾಗಿದ್ದರೂ
ಸಹಾಯಕ್ಕಾಗಿ ನಿನಗೇ ಮೊರೆಯಿಡುವೆನು!
ಅತ್ಯುನ್ನತವಾದ ಆಶ್ರಯಗಿರಿಗೆ ನನ್ನನ್ನು ಹತ್ತಿಸು.
ನೀನೇ ನನ್ನ ಆಶ್ರಯಸ್ಥಾನ;
ಶತ್ರುಗಳಿಂದ ಕಾಪಾಡುವ ಭದ್ರವಾದ ಬುರುಜು.
ನಿನ್ನ ಗುಡಾರದಲ್ಲಿ ಸದಾಕಾಲ ವಾಸಿಸುವುದಕ್ಕೂ,
ನಿನ್ನ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುವುದಕ್ಕೂ ತವಕಪಡುತ್ತಿರುವೆ.
 
ದೇವರೇ, ನನ್ನ ಹರಕೆಗಳನ್ನೆಲ್ಲಾ ನೀನು ಕೇಳಿರುವೆ.
ನಿನ್ನಲ್ಲಿ ಭಯಭಕ್ತಿಯುಳ್ಳವರಿಗೆ ಬರುವ ಸ್ವಾಸ್ತ್ಯವನ್ನು ನೀನು ನನಗೆ ಕೊಟ್ಟಿರುವೆ.
ರಾಜನಿಗೆ ದೀರ್ಘಾಯುಷ್ಯವನ್ನು ದಯಪಾಲಿಸು.
ಅವನು ಸದಾಕಾಲ ಜೀವಿಸಲಿ!
ಅವನು ನಿನ್ನ ಸಾನಿಧ್ಯವನ್ನು ಪಡೆದು ಸದಾಕಾಲವೂ ರಾಜನಾಗಿರಲಿ!
ನಿನ್ನ ನಿಜಪ್ರೀತಿಯಿಂದ ಅವನನ್ನು ಸಂರಕ್ಷಿಸು.
ಆಗ ನಾನು ನಿನ್ನ ಹೆಸರನ್ನು ಸದಾಕಾಲ ಕೊಂಡಾಡುವೆನು.
ನನ್ನ ಹರಕೆಗಳನ್ನು ಪ್ರತಿದಿನವೂ ಸಲ್ಲಿಸುವೆನು.